ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಿದರು.
ಚುನಾವಣೆಯಲ್ಲಿ ಲೇಬರ್ ಪಕ್ಷವು ಗಮನಾರ್ಹ ವಿಜಯ ಸಾಧಿಸಿ, ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿದರು.
ಇಬ್ಬರೂ ನಾಯಕರು ಉಭಯ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡು, ಭಾರತ ಮತ್ತು ಯು.ಕೆ. ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯ ಬಗ್ಗೆ ಮಾತುಕತೆ ನಡೆಸಿದರು. ಪರಸ್ಪರ ಲಾಭದಾಯಕವಾದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಇಬ್ಬರೂ ನಾಯಕರು ಒಪ್ಪಿಕೊಂಡರು.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಶ್ಲಾಘಿಸಿದ ಎರಡೂ ದೇಶದ ನಾಯಕರು, ಎರಡೂ ದೇಶದ ನಡುವಿನ ಸಂಬಂಧಗಳನ್ನು ಉತ್ತಮಗೊಳಿಸಲು ಒಪ್ಪಿಕೊಂಡರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತಕ್ಕೆ ಶೀಘ್ರ ಭೇಟಿ ನೀಡುವಂತೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಆಹ್ವಾನ ನೀಡಿದರು.
ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.